ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಇಬ್ಬರು ವೈದ್ಯರು ಮಾತ್ರ ಅರ್ಜಿ ಹಾಕಿದ್ದರು ಎಂದರು.
ತಾಲೂಕು ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಿಲ್ಲ. ಹಾಗೆಯೇ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ರೋಗಿಗಳು ಸೂಪರ್ ಸ್ಪೆಷಾಲಿಟಿ ಸೌಲಭ್ಯಕ್ಕಾಗಿ ಮಂಗಳೂರು ಅಥವಾ ಗೋವಾಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲಾಗುತ್ತಿದೆ. ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳು ಪೂರಕವಾಗಿ ಬೇಕಾಗುತ್ತದೆ. ಈಗಾಗಲೇ ಮೈಸೂರು, ಕಲಬುರಗಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿದ್ದು, ಬೇರೆ ಬೇರೆ ಕಡೆಯೂ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಜನಪ್ರತಿನಿಧಿಗಳ ಸಭೆ: ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು. ಸ್ಥಳೀಯ ಶಾಸಕರ ಸಭೆ ನಡೆಸಬೇಕು ಎಂದು ಸಚಿವರಿಗೆ ಸೂಚಿಸಿದರು. ಇದಕ್ಕೆ ಸಮತಿಸಿದ ಸಚಿವರು, ದ.ಕನ್ನಡ ಜಿಲ್ಲೆಯ ಶಾಸಕರ ಸಭೆ ನಡೆಸುವುದಾಗಿ ಭರವಸೆ ನೀಡಿದರು.
ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿನ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು, ಶಾಸಕ ಎಚ್.ಡಿ.ತಮ್ಮಯ್ಯ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
ಮಲೆನಾಡು ಭಾಗದ ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ತೆರೆದ ಬಾವಿ ನಿರ್ಮಿಸಲು ಚಿಂತನೆ ನಡೆದಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಕಳೆದ ಬಿಜೆಪಿ ಸರ್ಕಾರ ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಶಂಕುಸ್ಥಾಪನೆ ನೇರವೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ 100 ಕೋಟಿ ರೂ. ನೀಡಿದೆ. ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. 10 ಬೋರ್ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ಮಳೆ ಕೊಯ್ಲು ವ್ಯವಸ್ಥೆ ಮಾಡಿದರೆ ನೀರಿನ ಸೌಲಭ್ಯ ಸರಿಪಡಿಸಬಹುದು ಎಂದು ತಿಳಿಸಿದರು.
ಶೀಘ್ರ ತೆರದ ಬಾವಿ ನಿರ್ಮಾಣ: ಕಾಲೇಜಿನಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಲು 348 ಲಕ್ಷ ರೂ. ಅಂದಾಜು ವೆಚ್ಚ ತಯಾರು ಮಾಡಲಾಗಿದೆ. ಬಯಲು ಸೀಮೆಯಲ್ಲಿ ನೀರಿನ ಸಮಸ್ಯೆ ಸಾಮಾನ್ಯ. ಚಿಕ್ಕಮಗಳೂರಿನಲ್ಲೂ ನೀರಿನ ಸಮಸ್ಯೆ ಇರುವುದು ಅಚ್ಚರಿಯ ವಿಷಯ. ಹಲವು ಬೋರ್ವೆಲ್ ಕೊರೆಸಲಾಗಿದೆ. ಆದರೂ ಪ್ರಯೋಜನವಾಗುತ್ತಿಲ್ಲ. ತೆರೆದ ಬಾವಿ ನಿರ್ಮಾಣ ಮಾಡಿದರೆ ಸೂಕ್ತ ಎಂಬ ಸಲಹೆ ಬಂದಿದೆ. ಇದರ ಪರಿಶೀಲನೆ ಮಾಡಲಾಗುತ್ತಿದೆ. ಮಳೆಕೊಯ್ಲು ವ್ಯವಸ್ಥೆಯನ್ನು ಆಂತರಿಕ ಸಂಪನೂಲದಲ್ಲಿ ನಿರ್ವಹಣೆ ಮಾಡಲು ಆರ್ಥಿಕ ಇಲಾಖೆ ಸಹಮತ ವ್ಯಕ್ತ ಪಡಿಸಿದೆ. ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು.