ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ನಾಲ್ವರು ಹಿಂದೂಗಳು ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಕೊಲೆ ಪ್ರಕರಣದ ಬೆನ್ನು ಹತ್ತಿದ ಮಂಗಳೂರು ಪೊಲೀಸರು 5 ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದು, ಎಲ್ಲಾ 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ವಿಚಾರಣೆ ನಡೆಸಿದ್ದಾರೆ.
ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಮಂಗಳೂರಿನ ವಿವಿಧೆಡೆ ತಲೆಮರೆಸಿಕೊಂಡಿದ್ದ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಾಲ್ವರು ಹಿಂದೂಗಳು ಇದ್ದಾರೆ ಎನ್ನಲಾಗಿದ್ದು, ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು ಎಂದು ಹೇಳಲಾಗಿದ್ದು, ಮಂಗಳೂರಿನ ಸಫ್ವಾನ್ ಗ್ಯಾಂಗ್ ಜೊತೆ ಗುರುತಿಸಿಕೊಂಡಿದ್ದರು ಎಂದು ಹೇಳಲಾಗಿದೆ.
ಸುಹಾಸ್ ಶೆಟ್ಟಿ ಕೊಲೆಗೆ ಪೊಲೀಸರೇ ಪರೋಕ್ಷ ಕಾರಣ ಎಂದು ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಮುಖಂಡ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದರು.
ಸುಹಾಸ್ ಶೆಟ್ಟಿಗೆ ಕೊಲೆ ಬೆದರಿಕೆ ಇದೆ ಎಂದು ಪೊಲೀಸರೇ ವಾರದ ಹಿಂದೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ವಾಹನದಲ್ಲಿ ಮಾರಕಾಸ್ತ್ರ ಇಟ್ಟುಕೊಳ್ಳದಂತೆ ಸೂಚಿಸಿದ್ದರು. ಪೊಲೀಸರು ನೀಡಿದ ಎಚ್ಚರಿಕೆ ದುಷ್ಕರ್ಮಿಗಳಿಗೆ ಹೇಗೆ ಗೊತ್ತಾಯಿತು ಎಂದು ಅವರು ಪ್ರಶ್ನಿಸಿದ್ದಾರೆ.