ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಗರದ ಹೊರವಲಯದ ಅನಕಪಲ್ಲಿಯಲ್ಲಿ ನಡೆದಿದೆ.
ಗಾಯಗೊಂಡಿರುವ 7 ಮಂದಿಯಲ್ಲಿ ನಾಲ್ಕೈದು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಕಿ ಅವಘಡದ ಕುರಿತು ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ವಿಷಾದ ವ್ಯಕ್ತಪಡಿಸಿ ಮೃತರ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಕಿ ಅವಘಡದ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಗೃಹ ಸಚಿವೆ ವಿ.ಅನಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.