Wednesday, September 10, 2025
Menu

ಸ್ಲಂ ಬೋರ್ಡ್‌ನಡಿ 42 ಸಾವಿರ ಮನೆಗಳ ನಿರ್ಮಾಣ, ಮೂಲಸೌಲಭ್ಯಗಳಿಗೆ ಅನುದಾನ

ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಬಗ್ಗೆ ವಿವರಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು  ಸಭೆಯಲ್ಲಿ ಮಾಹಿತಿ ನೀಡಲಾಗಿದೆ.

ಫಲಾನುಭವಿಗಳ ವಂತಿಕೆ ಒಟ್ಟು ರೂ. 134ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಯಡಿ ರೂ.900 ಕೋಟಿ ಅನುದಾನ ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.  ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸುವ ಅಗತ್ಯ ಅನುದಾನ ಹಂಚಿಕೆ ಕುರಿತಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶಿಸಿದರು.

ಸಚಿವರಾದ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ವಸತಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *