ಚಿಕ್ಕಮಗಳೂರಿನ ಕೊಪ್ಪ ತಾಲೂಕು ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್ ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಟುಂಬದವರು ಗಮನಿಸಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿರುವುದಾಗಿ ಎಂದು ವೈದ್ಯರು ತಿಳಿಸಿದ್ದಾರೆ. ಶಿಕ್ಷಣದಲ್ಲಿ ಪ್ರತಿಭಾನ್ವಿತನಾಗಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಓದಿನ ಒತ್ತಡ ಕಾರಣವೇ ಅಥವಾ ಬೇರೆ ವೈಯಕ್ತಿಕ ಕಾರಣ ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಪ್ಪಳದಲ್ಲಿ ಮಹಿಳೆ ಅನುಮಾನಾಸ್ಪದ ಸಾವು
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪುಷ್ಪವತಿ (23) ಅನುಮಾನಾಸ್ಪದವಾಗಿ ಮೃತಪಟ್ಟ ಮಹಿಳೆ. ಅವರಿಗೆ ಮೂರು ತಿಂಗಳ ಮಗು ಇದೆ.
ಹಾಸನ ಜಿಲ್ಲೆಯ ಪುಷ್ಪವತಿ ಇನ್‌ಸ್ಟಾದಲ್ಲಿ ಪರಿಚಯವಾಗಿದ್ದ ಮರಿಯಪ್ಪ ಎಂಬಾತನ ಪ್ರೀತಿಸಿ ಮದ್ವೆಯಾಗಿದ್ದರು. ಪತಿ ಮನೆಯವರೇ ಹೊಡೆದು ನೇಣು ಹಾಕಿರುವುದಾಗಿ ಪುಷ್ಪವತಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.