ಬೆಂಗಳೂರು: ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ಮಹಿಳೆ ಸೇರಿದಂತೆ 7 ಮಂದಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರ್ ಸಿಬಿ ತಂಡದ ಆಟಗಾರರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಉಂಟಾದ ನೂಕುನುಗ್ಗಲಿನಲ್ಲಿ 6 ಮಂದಿ ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮುಗಿಬಿದ್ದಿದ್ದು, ಅಭಿಮಾನಿಗಳು ಗೇಟ್ ಹತ್ತಿ ಒಳಗೆ ನುಗ್ಗಲು ಯತ್ನಿಸಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟರೆ, ಬೌರಿಂಗ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ಅಸುನೀಗಿದ್ದಾರೆ. ಮೃತಪಟ್ಟವರಲ್ಲಿ ಒಬ್ಬ ಮಹಿಳೆ ಸೇರಿದ್ದು, ವಿವರಗಳಿಗೆ ನಿರೀಕ್ಷಿಸಲಾಗುತ್ತಿದೆ.
ಆರ್ ಸಿಬಿ ತಂಡ ಮಂಗಳವಾರ ಅಹಮದಾಬಾದ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ 6 ರನ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ 18 ವರ್ಷಗಳಲ್ಲಿ ಮೊದಲ ಬಾರಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಸಂಭ್ರಮ ಆಚರಿಸಲು ಆಟಗಾರರಿಗೆ ಚಿನ್ನಸ್ವಾಮಿ ಸಾವಿರಾರು ಸಂಖ್ಯೆಯಲ್ಲಿ ಜನರು ಮುಗಿಬಿದ್ದಿದ್ದರು. ಪೊಲೀಸರು ತಡೆಯಲು ಹರಸಾಹಸಪಡಬೇಕಾಯಿತು.