ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಸಿಎಂ, ಡಿಸಿಎಂ, ಗೃಹಸಚಿವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಸರ್ಕಾರ ತನ್ನ ಪ್ರಚಾರದ ತೆವಲಿಗೆ ಸರಿಯಾದ ವ್ಯವಸ್ಥೆ ಮಾಡದೆ ಆತುರಾತುರವಾಗಿ ಕಾರ್ಯಕ್ರಮ ಮಾಡಿ ಅಮಾಯಕರ ಬಲಿ ಪಡೆದಿದ್ದನ್ನು ಒಕ್ಕೊರಲಿನಿಂದ ಖಂಡಿಸಲಾಯಿತು. ಈ ಸಾವುಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತಿತರರು ಆಗ್ರಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ನಾರಾಯಣಸ್ವಾಮಿ ಛಲವಾದಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಡಾ. ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್ ರವಿ ಕುಮಾರ್, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.