ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಅಬ್ಬರ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭಾನುವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಹಲವೆಡೆ ಮಳೆ ಪ್ರಮಾಣ ಕೊಂಚ ಕ್ಷೀಣಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಅಥವಾ ಮಧ್ಯಮ ಪ್ರಮಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಅಧಿಕವಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 30°ಸೆ ಮತ್ತು 21°ಸೆ ಇರಲಿದೆ. ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಅಕ್ಟೋಬರ್‌ನಲ್ಲಿ ಹೆಚ್ಚು ಮಳೆ: ದೇಶಾದ್ಯಂತ ಅಕ್ಟೋಬರ್‌ನಲ್ಲಿ ದೀರ್ಘಾವಧಿಯ ಸರಾಸರಿ (ಎಲ್ ಪಿಎ) 75.4 ಮಿಲಿ ಮೀಟರ್‌ಗಿಂತ 115 ಪ್ರತಿಶತಕ್ಕಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.
ಶಕ್ತಿ ಚಂಡಮಾರುತ:
ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಮಹಾರಾಷ್ಟ್ರ ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಅ. 7ರವರೆಗೆ ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.