ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಇಡೀ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಸಿವಿಲ್ ಕಾಮಗಾರಿಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರ ಗಮನಹರಿಸಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಸಚಿವರು, ಎಲ್ಲ ಯೋಜನೆಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನಡೆಯುತ್ತಿರುವ ವೈದ್ಯಕೀಯ ಕಾಲೇಜು, ಆಸ್ಪತ್ರೆ, ಹಾಸ್ಟೆಲ್ ಸೇರಿದಂತೆ ಇತರೆ ಕಟ್ಟಡ ಕಾಮಗಾರಿಗಳ ಕುರಿತು ಸಮಗ್ರ ಮಾಹಿತಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವರು ಪಡೆದುಕೊಂಡರು.
ಎಲ್ಲ ಕಾಮಗಾರಿಗಳು ಯಾವ ಹಂತದಲ್ಲಿದೆ. ಎಷ್ಟು ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಿಗದಿತ ಸಮಯದಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದು ಡಾ. ಪಾಟೀಲ್ ಸೂಚನೆ ನೀಡಿದರು.
ಈಗ ನಡೆಯುತ್ತಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಲೋಪ-ದೋಷಗಳು ಇರಬಾರದು. ಎಲ್ಲ ಕಾಮಗಾರಿಗಳ ಕುರಿತು ಸೂಕ್ತ ವರದಿಯನ್ನು ಸಲ್ಲಿಸಬೇಕು. ಒಟ್ಟಾರೆಯಾಗಿ ಕಾಮಗಾರಿಗಳು ಕಾಲಮಿತಿಯಲ್ಲಿ ಪೂರ್ಣಗೊಂಡು, ಶೀಘ್ರದಲ್ಲೇ ಲೋಕಾರ್ಪಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್, ನಿರ್ದೇಶಕರಾದ ಡಾ. ಸುಜಾತಾ ರಾಠೋಡ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.