Menu

ಕರ್ನಾಟಕದ ಕಾಂಗ್ರೆಸ್‌ ಪಕ್ಷಕ್ಕೆ ಈಗ ಗ್ಯಾರಂಟಿಗಳು ಬಿಸಿ ತುಪ್ಪ: ಆರ್‌. ಅಶೋಕ್‌

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎನ್ನುವ ಹಪಹಪಿಯಿಂದ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಮಾಡಿದ  ಕರ್ನಾಟಕದ ಕಾಂಗ್ರೆಸ್‌ ಪಕ್ಷಕ್ಕೆ ಈಗ ಗ್ಯಾರೆಂಟಿಗಳು ಬಿಸಿ ತುಪ್ಪವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದೆ ಎನ್ನುವ ಕೂಗು ಕಾಂಗ್ರೆಸ್ ಪಕ್ಷದಲ್ಲೇ ಏಳುತ್ತಿದ್ದು ಈ ಹಿಂದೆ ಎಐಸಿಸಿ ಅಧ್ಯಕ್ಷ ಶ್ರೀಖರ್ಗೆ ಅವರೇ “ಸರ್ಕಾರದ ಬಳಿ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ” ಎಂದು ಒಪ್ಪಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು “ರಸ್ತೆ ಬೇಕು ಅಂದರೆ ಗ್ಯಾರೆಂಟಿ ಸ್ಕೀಮ್ ಬಂದ್ ಮಾಡಬೇಕಾಗುತ್ತದೆ” ಎಂದು ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ.

ಈಗ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರು, ಮಾಜಿ ಸಚಿವರಾದ ಶ್ರೀ ಆರ್.ವಿ.ದೇಶಪಾಂಡೆ ಅವರು “ನಾನು ಮುಖ್ಯಮಂತ್ರಿ ಆಗಿದ್ದರೆ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರ ಲಿಲ್ಲ” ಎಂದು ಹೇಳಿರುವುದು ಸಿಎಂ ಸಿದ್ದರಾಮಯ್ಯ ಅವರು ಎಷ್ಟು ಅಸಮರ್ಥ ಮುಖ್ಯಮಂತ್ರಿ ಎನ್ನುವುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಇನ್ನೆಷ್ಟು ದಿನ ಈ ಭಂಡ ಬಾಳು ಸಿದ್ದರಾಮಯ್ಯ ನವರೇ,  ಸಾಕು ನಿಮ್ಮ ದುರಾಡಳಿತ. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ದೀಪಾವಳಿ ಉಡುಗೊರೆಯಾಗಿ ಮತ್ತೊಮ್ಮೆ ಸಾರಿಗೆ ಮುಷ್ಕರದ ಬರೆ ಹಾಕಲಾಗಿದೆ. ಈ ಬಾರಿ ದೀಪಾವಳಿ ಹಬ್ಬಕ್ಕೆ ಜನಸಾಮಾನ್ಯರು ಊರಿಗೆ ಹೋಗಲು ಬಸ್ಸಿಗಾಗಿ ಪರದಾಡಬೇಕಾದ ಪರಿಸ್ಥಿತಿ ಎದುರಾಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ತಮ್ಮ ಬೇಡಿಕೆ ಈಡೇರಿಸದಿದ್ದರೆ ಮತ್ತೊಮ್ಮೆ ಅಕ್ಟೋಬರ್ 15ರಿಂದ ಮುಷ್ಕರ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರು ಎಚ್ಚರಿಕೆ ನೀಡಿದ್ದು, ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಮತ್ತೊಂದು ಪೋಸ್ಟ್‌ನಲ್ಲಿ ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published. Required fields are marked *