ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಎಸ್‌ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿವೆ.
ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸುಪ್ರೀಂ ನ್ಯಾಯಪೀಠ, ಎಸ್ಐಟಿಗೆ ತನಿಖೆ ವಹಿಸಲು ನಿರಾಕರಿಸಿತು. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳಬೇಕೆಂದು ಅರ್ಜಿದಾರರಿಗೆ ಸೂಚಿಸಿದೆ.
ಅರ್ಜಿದಾರರ ಪರ ವಕೀಲರು, ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದ್ದು, ಇನ್ನೂ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ವಾದಿಸಿದರು. ಚುನಾವಣಾ ಆಯೋಗ ಯಾವಾಗ ಕ್ರಮ ಕೈಗೊಳ್ಳಬೇಕು ಎಂದು ಒಂದು ಗಡುವು ನಿಗದಿ ಮಾಡಬೇಕು ಎಂದೂ ಅರ್ಜಿದಾರರು ನ್ಯಾಯಪೀಠಕ್ಕೆ ಮನವಿ ಮಾಡಿದರು. ಕೋರ್ಟ್ ಈ ಮನವಿಯನ್ನೂ ತಿರಸ್ಕರಿಸಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ದೊಡ್ಡ ಸಂಖ್ಯೆಯಲ್ಲಿ ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಹೇಳಿ, ದೇಶಾದ್ಯಂತ ಮತಕಳ್ಳತನ ಅಭಿಯಾನ ನೆಸಿದ್ದರು. ಈ ಅಕ್ರಮದ ಬಗ್ಗೆ ವಿಶೇಷ ತನಿಖೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ರೋಹಿತ್ ಪಾಂಡೆ ಎಂಬವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.