ಸೆಪ್ಟೆಂಬರ್ 27ರಂದು ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಸಮಾವೇಶ ತಮಿಳುನಾಡಿನ ಕರೂರಿನಲ್ಲಿ ನಡೆದಾಗ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನು ಒಳಗೊಂಡ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಈ ಪ್ರಕರಣದ ಮೇಲ್ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮೂರು ಸದಸ್ಯರ ಮಂಡಳಿಯನ್ನು ರಚಿಸಿದೆ. ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರಿಗೆ ಈ ಮಂಡಳಿಯ ನೇತೃತ್ವ ವಹಿಸಲಾಗಿದೆ. ಪ್ರಕರಣದಲ್ಲಿ ಸಿಬಿಐ ತನಿಖೆಯ ಮೇಲ್ವಿಚಾರಣೆ ನಡೆಸಲು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ನ್ಯಾಯಮೂರ್ತಿ ರಸ್ತೋಗಿ ಪಡೆದಿದ್ದಾರೆ.
ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷದ ಸಮಾವೇಶಕ್ಕೆ 10,000 ಜನರು ಬರುವ ನಿರೀಕ್ಷೆ ಇತ್ತು. ಆದರೆ 27,000ಕ್ಕೂ ಹೆಚ್ಚು ಜನರು ಸೇರಿದ್ದರು. ಈ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಪ್ರಾಣಕಳೆದುಕೊಂಡು ಅನೇಕರು ಗಾಯಗೊಂಡಿದ್ದರು.
ಮದ್ರಾಸ್ ಹೈಕೋರ್ಟ್ ಈ ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (ಎಸ್ಐಟಿ) ವಹಿಸಿಕೊಳ್ಳುವ ಆದೇಶ ನೀಡಿತ್ತು. ಆದರೆ ವಿಜಯ್ ಅವರ ಪಕ್ಷ ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಮನವಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್ ತನಿಖೆಯನ್ನು ಸಿಬಿಐ ವಹಿಸುವ ಆದೇಶ ನೀಡಿದೆ. ನ್ಯಾಯಮೂರ್ತಿ ರಸ್ತೋಗಿ ಅವರ ನೇತೃತ್ವದ ಮೇಲ್ವಿಚಾರಣಾ ಮಂಡಳಿ ತನಿಖೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ನಡೆಸಲಿದೆ.