Thursday, October 16, 2025
Menu

ಸರ್ಕಾರಿ ನೌಕರರು ಆರೆಸ್ಸೆಸ್‌ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ: ಸಿಎಂಗೆ ಪ್ರಿಯಾಂಕ್‌ ಖರ್ಗೆ ಮತ್ತೊಂದು ಪತ್ರ

ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಇನ್ನಿತರ ಸಂಘ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮ ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಇಂಥ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟ ನಿರ್ದೇಶನ ನೀಡುವಂತೆ ಕೋರಿ ಸಚಿವರು ತಕ್ಷಣವೇ ಸುತ್ತೋಲೆ ಹೊರಡಿಸಲು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ, 1966 ಅನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ನಿಯಮಗಳಡಿ, ನಿಯಮ 5(1)ರ ಪ್ರಕಾರ ಹಲವು ನಿಬಂಧನೆಗಳು ಈಗಾಗಲೇ ಜಾರಿಯಲ್ಲಿವೆ. ಸರ್ಕಾರಿ ನೌಕರರು ರಾಜಕೀಯೇತರ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸ್ಪಷ್ಟ ನಿರ್ಬಂಧಗಳಿದ್ದರೂ ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಳು ಮತ್ತು ನೌಕರರು ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ. ಅಥವಾ ಅವುಗಳೊಂದಿಗೆ ಯಾವುದೇ ರೀತಿಯ ಸಂಬಂಧ ಹೊಂದಿರತಕ್ಕದ್ದಲ್ಲ. ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ. ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ..

ಈ ನಿಯಮಗಳು ಜಾರಿಯಲ್ಲಿದ್ದರೂ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ. ಸರ್ಕಾರಿ ನೌಕರರು ನಿರ್ದಿಷ್ಟ ರಾಜಕೀಯ ಅಥವಾ ರಾಜಕೀಯೇತರ ಸಿದ್ಧಾಂತದ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಿಯಮ ಉಲ್ಲಂಘನೆಯಾಗಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಆರ್‌ಎಸ್‌ಎಸ್ ಸಂಘಟನೆಗಳಿಂದ ಸರ್ಕಾರಿ ಸ್ಥಳಗಳಲ್ಲಿ ಶಾಖೆಗಳನ್ನು ಹೊಂದಿವೆ. ಸರ್ಕಾರಿ ಶಾಲಾ-ಕಾಲೇಜು ಅಥವಾ ಇತರ ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ತನ್ನ ಪಥಸಂಚಲನ ಹಾಗೂ ಬೈಠಕ್‌ಗಳನ್ನು ಮಾಡಿಕೊಂಡು ಬರುತ್ತಿದೆ. ಈವರೆಗೆ ಆರ್‌ಎಸ್‌ಎಸ್ ಎಂದಿಗೂ ದೇಶದ ಧ್ವಜವನ್ನೂ ಅಳವಡಿಕೆ ಮಾಡಿಕೊಂಡಿಲ್ಲ. ದೇಶಕ್ಕೆ ಗೌರವ ಕೊಡದ ಸಂಸ್ಥೆಗೆ ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಿಎಂಗೆ ಪತ್ರ ಈ ಹಿಂದೆ ಸಚಿವರು ಪತ್ರ ಬರೆದಿದ್ದರು. ಈ ಪತ್ರಕ್ಕೆ ಬಿಜೆಪಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರಿಗೆ ಬೆದರಿಕೆ ಕರೆಗಳೂ ಬಂದಿದ್ದವು. ಆ ಕರೆಗಳ ಮೂಲದ ತನಿಖೆಯೂ ನಡೆದಿದೆ.

Related Posts

Leave a Reply

Your email address will not be published. Required fields are marked *