ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸ್ಥಳಕ್ಕೆ ಸ್ಥಳೀಯ ಶಾಸಕ ಎ.ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಒಯ್ಯಲಾಗಿದೆ.
ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುರುವಾರ ಮಧ್ಯಾಹ್ನದಿಂದಲೇ ನಿರಂತರವಾಗಿ ಸುರಿಯುತ್ತಿದೆ. ಹಾವೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗಿದೆ. ಸಮುದ್ರ ಮೇಲ್ಮೈ ಮೇಲಿನ ಬಿರುಗಾಳಿ ತೀವ್ರತೆ ಹೆಚ್ಚಾಗಿದೆ. ರಾಜ್ಯದ ಹಲವೆಡೆ ಚಳಿ ಮಳೆ ಆವರಿಸಿದೆ. ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ಮುಂದಿನ ಎರಡು ಮೂರು ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ.
ಮುಂದಿನ ಒಂಬತ್ತು ದಿನಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.


