ಆಂಧ್ರದ ಕರಾವಳಿಗೆ ನಾಳೆ (ಅಕ್ಟೋಬರ್ 28ರಂದು) ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಅಪಾಯ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದೆ.
ಚಂಡಮಾರುತದ ಕಾರಣ ಆಂಧ್ರಪ್ರದೇಶದಲ್ಲಿ ಬಿರುಸಿನ ಮಳೆಯಾಗಲಿದೆ. ಹವಾಮಾನ ಇಲಾಖೆ (ಐಎಂಡಿ) ಈ ರಾಜ್ಯದ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ಬಿರುಸಿನ ಮಳೆ ಜೊತೆಗೆ ವೇಗದ ಗಾಳಿ ಮತ್ತು ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಭೂಕುಸಿತ ಆಗುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರು ಮತ್ತು ನಿವಾಸಿಗಳು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಒಡಿಶಾದಲ್ಲಿ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳನ್ನು ಅಕ್ಟೋಬರ್ 30ರವರೆಗೆ ಬಂದ್ ಮಾಡಲಾಗಿದೆ. ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್‌ಪಿಎಸ್‌ಆರ್ ನೆಲ್ಲೂರು ಜಿಲ್ಲೆಗಳಿಗೆ ತೀವ್ರ ನಿಗಾದೊಂದಿಗೆ ಎಚ್ಚರಿಕೆ ನೀಡಲಾಗಿದೆ. ಅಕ್ಟೋಬರ್ 27 ಮತ್ತು 28 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾ ಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್‌ಗಳಲ್ಲೂ ಮಳೆ ಸುರಿಯಲಿದೆ.


