ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರ ಬಗ್ಗೆ ಭಾಷಣದಲ್ಲಿ ಅಗೌರವದಿಂದ ಮಾತನಾಡಿದ್ದಾರೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ಮಾಹಿತಿ ನೀಡಿದ್ದಾರೆ ಎಂದರು.
ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಕಲ್ಲಡ್ಕ ಪ್ರಭಾಕರ ಭಟ್‌ಗೆ ಕೋರ್ಟ್ ರಿಲೀಫ್
ಪ್ರಚೋದನಕಾರಿ ಭಾಷಣ ಆರೋಪದಡಿ ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿದ್ದ FIR ವಿಚಾರವಾಗಿ ಬಲವಂತದ ಕ್ರಮ ಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ವಿಚಾರಣೆಯನ್ನು ಅ.29ಕ್ಕೆ ಕೋರ್ಟ್ ಮುಂದೂಡಿದೆ.
ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈಶ್ವರಿ ಪದ್ಮುಂಜ ನೀಡಿದ್ದ ದೂರಿನ ಅನ್ವಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಅ. 30ರಂದು ವಿಚಾರಣೆಗೆ ಹಾಜರಾಗುವಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟಿಸ್ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಪ್ರಭಾಕರ್ ಭಟ್ ಕೋರ್ಟ್‌ಗೆ ಹೋಗಿದ್ದರು.


