ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಉಳ್ಳಾಲ, ಬಂಟ್ವಾಳ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಮೂರು ತಾಲೂಕುಗಳ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ನೀಡಲಾಗಿದೆ. ಉಳ್ಳಾಲ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ.ಡಿ.ಭಟ್ ರಜೆ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು ಬಿರುಗಾಳಿ ಸಹಿತ ಮಳೆಯಾಗಲಿದೆ.
ಕರಾವಳಿ, ಮಲೆನಾಡು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.