ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಕನಿಷ್ಠ 20 ಜನರು ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ನಡೆದಿದೆ.
ಈ ಅಪಘಾತದಲ್ಲಿ 24 ಜನ ಗಾಯಗೊಂಡಿದ್ದಾರೆ. ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಣ ಅಪಘಾತ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗಿದೆ. ಲಾರಿಯಲ್ಲಿದ್ದ ಜಲ್ಲಿಕಲ್ಲು ಹೆಚ್ಚಿನ ಜೀವಹಾನಿಗೆ ಕಾರಣವಾಗಿದೆ. ಹತ್ತುಕ್ಕೂ ಹೆಚ್ಚು ಜನರು ಜಲ್ಲಿಕಲ್ಲುಗಳ ಅಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ 18 ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಸೇರಿದ್ದಾರೆ.
ಗಾಯಗೊಂಡಿರುವವರಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ಸಿಎಂ ರೇವಂತ್ ರೆಡ್ಡಿ , ತಕ್ಷಣವೇ ಅಪಘಾತದ ಸ್ಥಳಕ್ಕೆ ಹೋಗಲು ಅಧಿಕಾರಿಗಳಿಗೆ ಆದೇಶಿಸಿ ಅಗತ್ಯ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಗಾಯಗೊಂಡ ಎಲ್ಲರನ್ನು ತಕ್ಷಣ ಹೈದರಾಬಾದ್‌ಗೆ ಸ್ಥಳಾಂತರಿಸಿ ಉತ್ತಮ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಸಿಎಸ್ ಮತ್ತು ಡಿಜಿಪಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ವಾರದ ಹಿಂದಷ್ಟೇ ಕರ್ನೂಲ್ನಲ್ಲಿ ಬಸ್ ಬೈಕ್ಗೆ ಡಿಕ್ಕಿಯಾಗಿ 19 ಪ್ರಯಾಣಿಕರು ಮೃತಪಟ್ಟು, 12 ಜನರು ಗಾಯಗೊಂಡಿದ್ದರು. ಮೊನ್ನೆಯಷ್ಟೇ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಮೃತಪಟ್ಟಿದ್ದರು.


