ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಶನಿವಾರ ನಡೆದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಮುಖಂಡರೆಲ್ಲ ಸರ್ಕಾರ ದಿವಾಳಿ ಆಗುತ್ತೆ ಎಂದು ಆರೋಪಿಸಿದರು. ಆದರೆ ಈಗ ಅವರೇ ಗ್ಯಾರಂಟಿಗಳನ್ನು ಅನುಸರಿಸುತ್ತಿದ್ದಾರೆ ಎಂದರು.
ಈಗ ಯಾವ ರಾಜ್ಯಕ್ಕೆ ಹೋದರೂ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವುದನ್ನು ನೋಡಬಹುದು. ಹರಿಯಾಣ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಈಗ ಬಿಹಾರ ಚುನಾವಣೆಯಲ್ಲೂ ನಮ್ಮ ಗ್ಯಾರಂಟಿಯನ್ನು ಅನುಕರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಗ್ಯಾರಂಟಿ ಯೋಜನೆಯಿಂದ ಸರ್ಕಾರ ದಿವಾಳಿ ಆಗುತ್ತೆ ಎಂದು ಆರೋಪಿಸಿದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಜಾರಿಗೆ ತರಲಾಗಿದೆ. ಕಲಬುರಗಿ, ಬೀದರ್ ಅಲ್ಲದೇ ಇತ್ತೀಚೆಗೆ ಇಂಡಿಯಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಇದೀಗ ಮೈಸೂರಿನಲ್ಲಿ 2600 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿ ಪಾದಯಾತ್ರೆಯಿಂದ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಚಾಮರಾಜನಗರ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪಾದಯಾತ್ರೆ ಕಾರಣವಾಗಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪಕ್ಷ ಉತ್ತಮ ಸಾಧನೆ ಮಾಡುತ್ತಿದೆ ಎಂದು ಅವರು ನುಡಿದರು.