Tuesday, November 04, 2025
Menu

ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ನಿಧನ

ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್​​ ಶಾಸಕ, ಮಾಜಿ ಸಂಸದ, ಮಾಜಿ ಸಚಿವರೂ ಆಗಿದ್ದ ಹೆಚ್​.ವೈ.ಮೇಟಿ (79) ನಿಧನರಾದರು. ಹೆಚ್​.ವೈ.ಮೇಟಿ ಅವರನ್ನು ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಮೇಟಿಯವರು ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಅವರು 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿದ್ದರು.

2008ರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಮೇಟಿಯವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋತಿದ್ದರು. 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಅವರು, ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದಿದ್ದರು.

ಸಕಲ ಸರ್ಕಾರಿ ಗೌರವದೊಂದಿಗೆ ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಹುಟ್ಟೂರಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

 

ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ  ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸಲ್ಲಿಸಿದ್ದಾರೆ.

 

 

Related Posts

Leave a Reply

Your email address will not be published. Required fields are marked *