ಬೆಂಗಳೂರು: ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ತರಣ್ ರಾಜ್ ತಮ್ಮ ಸೆಲ್ಗಳಲ್ಲಿ ಮೊಬೈಲ್ ಬಳಸುತ್ತಿರುವ ವಿಡಿಯೋ, ಫೋಟೋಗಳು ವೈರಲ್ ಆಗಿವೆ.
ಈ ದೃಶ್ಯಗಳು ಬಹಿರಂಗವಾಗುತ್ತಿದ್ದಂತೆ ಸಂಬಂಧಪಟ್ಟ ಕೈದಿಗಳ ಬ್ಯಾರಕ್‌ಗಳನ್ನು ಪರಿಶೀಲನೆ ನಡೆಸುವಂತೆ ಜೈಲಾಧಿಕಾರಿಗಳಿಗೆ ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಎಡಿಜಿಪಿ) ಬಿ.ದಯಾನಂದ್ ಸೂಚಿಸಿದ್ದಾರೆ.
ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಆರೋಪಿ ತರಣ್ ರಾಜ್ಗೆ ಸೆಲ್‌ನಲ್ಲಿ ಮೊಬೈಲ್ ಫೋನ್‌ಗಳು, ಟಿವಿ ವ್ಯವಸ್ಥೆ ಸೇರಿದಂತೆ ಇತರ ಸೌಲಭ್ಯಗಳು ಲಭ್ಯವಾಗುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.
ಕೈದಿಗಳಿಗೆ ವಿಶೇಷ ಆತಿಥ್ಯ ದೊರೆಯುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಅದರ ಬಗ್ಗೆ ನನಗೆ ಗೊತ್ತಿಲ್ಲ, ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ” ಎಂದು ತಿಳಿಸಿದ್ದಾರೆ.
ಯಾರೀ ಉಮೇಶ್ ರೆಡ್ಡಿ:
ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆ ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ 2022ರಲ್ಲಿ ಆದೇಶಿಸಿತ್ತು.
ಬೆಂಗಳೂರಲ್ಲಿ 1998ರ ಫೆ.28ರಂದು ವಿಧವೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಉಮೇಶ ರೆಡ್ಡಿ ತಪ್ಪಿತಸ್ಥ ಎಂದು ಬೆಂಗಳೂರು ಕೋರ್ಟ್ ತೀರ್ಪು ನೀಡಿ, ಮರಣದಂಡಣೆ ವಿಧಿಸಿತ್ತು. ಬಳಿಕ ರಾಷ್ಟ್ರಪತಿಗಳಿಗೆ ಉಮೇಶ್ ರೆಡ್ಡಿ ಕ್ಷಮಾಪಣಾ ಅರ್ಜಿ ಸಲ್ಲಿಸಿದ್ದರು. 2013ರಲ್ಲಿ ಮೇ 12 ರಂದು ರಾಷ್ಟ್ರಪತಿಗಳು, ಉಮೇಶ್ ರೆಡ್ಡಿ ಅರ್ಜಿಯನ್ನು ತಿರಸ್ಕರಿಸಿದ್ದರು


