ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಭಯಾನಕ ಕಾರು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭೀಕರ ಸ್ಫೋಟದ ಮರುದಿನವೇ ಈ ಸ್ಫೋಟ ನಡೆದ್ದು, 25 ಮಂದಿ ಗಾಯಗೊಂಡಿದ್ದಾರೆ.
ಇಸ್ಲಾಮಾಬಾದ್‌ನ ನ್ಯಾಯಾಂಗ ಸಂಕೀರ್ಣದ ಹೊರಗಡೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಈ ಸ್ಫೋಟ ಸಂಭವಿಸಿ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ಶಬ್ದವು ಹಲವಾರು ಕಿಲೋಮೀಟರ್ ವ್ಯಾಪ್ತಿಯವರೆಗೆ ಕೇಳಿಸಿತ್ತು ಎನ್ನಲಾಗಿದೆ. ಸುತ್ತಮುತ್ತಲಿನ ಕಟ್ಟಡಗಳ ಕಿಟಕಿಗಳು ಪುಡಿಯಾಗಿದ್ದು, ಸುತ್ತಮುತ್ತ ಪ್ರದೇಶದಲ್ಲಿ ಉದ್ವಿಗ್ನತೆಯ ವಾತಾವರಣ ನಿರ್ಮಾಣಗೊಂಡಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರಿನಲ್ಲಿ ಅಳವಡಿಸಲಾದ ಗ್ಯಾಸ್ ಸಿಲಿಂಡರ್ ಸ್ಫೋಟವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಇದು ಯಾವ ರೀತಿಯ ಸ್ಫೋಟ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ವಕ್ತಾರರು ಹೇಳಿದ್ದು, ವಿಧಿವಿಜ್ಞಾನ ತಂಡದಿಂದ ವರದಿ ಬಂದ ನಂತರ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯ ಎಂದಿದ್ದಾರೆ. ದಾಳಿಯ ಜವಾಬ್ದಾರಿಯನ್ನು ಇಲ್ಲಿಯವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಮುಂದಿನ ವರ್ಷದ ಆರಂಭದಲ್ಲಿ ಪಾಕಿಸ್ತಾನದಲ್ಲಿ ಚುನಾವಣೆ ನಡೆಯಲಿದ್ದು, ಈ ಗಟನೆಯು ರಾಜಧಾನಿಯಲ್ಲಿ ಭದ್ರತೆಯ ಬಗ್ಗೆ ಕಳವಳ ಹೆಚ್ಚಿಸಿದೆ.
ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದ ಕಾರು ಸ್ಫೋಟದಲ್ಲಿ ಒಟ್ಟು ಹನ್ನೆರಡು ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ದಾಳಿಗೆ ಉಗ್ರರ ನಂಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ತನಿಖೆ ಚುರುಕುಗೊಂಡಿದೆ. ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.


