ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಿಎಂ ಪೋಸ್ಟ್ ಮಾಡಿದ್ದಾರೆ.
ತಿಮ್ಮಕ್ಕ ಗುಬ್ಬಿ ತಾಲೂಕಿನಲ್ಲಿ ಹುಟ್ಟಿದವರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಶಾಲಾ ಶಿಕ್ಷಣ ಲಭಿಸದ ಇವರು ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ರಾಮನಗರ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರನ್ನು ಮದುವೆಯಾಗಿದ್ದು, ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು. ಸಸಿಗಳಿಗೆ ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸು ತ್ತಿದ್ದರು. ಸಸಿಗಳನ್ನುಜಾನುವಾರುಗಳ ಕಾಟದಿಂದ ರಕ್ಷಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿದರು. ಅವರು ಮರೆಯಾದರೂ ಅವರು ನೆಟ್ಟ ಮರಗಳು ನೀಡುವ ತಂಗಾಳಿ ಬೀಸುತ್ತಲೇ ಇದೆ.


