ಬೆಂಗಳೂರು: ಕೆಆರ್ ನಗರದ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಹಾಗೂ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನೇತೃತ್ವದ ಪೀಠ ಶುಕ್ರವಾರ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದ್ದು, ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟ ಕಾಯ್ದಿರಿಸಿತ್ತು.
ಶನಿವಾರ ಪ್ರಜ್ವಲ್ ರೇವಣ್ಣ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರ ನಡುವೆ ಶಿಕ್ಷೆಯ ಪ್ರಮಾಣದ ಕುರಿತು ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.
ಸೆಕ್ಷನ್ 376 (2) (ಕೆ) ಸೆಕ್ಷನ್ ಮತ್ತು ಸೆಕ್ಷನ್ 376 (2) (ಎನ್) ಅಡಿಯಲ್ಲಿ ಜೀವಾವಧಿ ಶಿಕ್ಷೆ ಜೊತೆಗೆ 5 ಲಕ್ಷ ರೂ. ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಅಲ್ಲದೇ ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರ ಮೊತ್ತ ನೀಡುವಂತೆ ಸೂಚಿಸಿದೆ.