ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧ ನಗರದ 14 ಕಡೆಗಳಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜೆ ಮತ್ತು ಸುರತ್ಕಲ್ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಸೇರಿ 14 ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕೆಲವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ ಮೇ 1ರಂದು ರಾತ್ರಿ ಮಂಗಳೂರು ನಗರದ ಬಜೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು.
ಜನವರಿಯಲ್ಲೇ ಸಫ್ಘಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದರು.
ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿ ಇದುವರೆಗೆ 11 ಆರೋಪಿಗಳನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇದಾದ ಬಳಿಕ ಸುಹಾಸ್ ಶೆಟ್ಟ ಕೊಲೆಗೆ ಪ್ರತೀಕಾರವಾಗಿ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ