ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೃಹಿಣಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಸಂಶಯ ಹುಟ್ಟು ಹಾಕಿದೆ. ಗಂಡು ಮಗು ಬೇಕೆಂಬ ದುರಾಸೆಯಿಂದ ಪತಿ ಕಿರುಕುಳ ನೀಡಿ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದು, ಪ್ರಕರಣ ದಾಖಲಾಗಿದೆ.
ಮೃತ ಮಹಿಳೆ ರೇಣುಕಾ (32) ಮತ್ತು ಭೀಮೇಶ್ವರ ಕಾಲೋನಿಯ ನಿವಾಸಿ ಶಿವನಂಜಪ್ಪ (40) 17 ವರ್ಷಗಳ ಹಿಂದೆ ವಿವಾಹವಾಗಿ, ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಗಂಡು ಮಗುವಿನ ಆಸೆಯಿಂದ ಶಿವನಂಜಪ್ಪ ರೇಣುಕಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ಇದೇ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಿವನಂಜಪ್ಪ ರೇಣುಕಾ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಹಲ್ಲೆ ನಂತರ ರೇಣುಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗಂಡನೇ ಹೊಡೆದು ನೇಣು ಹಾಕಿ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಮಾದನಾಯಕನಹಳ್ಳಿ ಪೊಲೀಸರು ಶಿವನಂಜಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.