ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ. ಕೊಟ್ಟ ಮಾತು ತಪ್ಪಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ. ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯಗೂ ಜವಾಬ್ದಾರಿ ಇದೆ. ಸಿದ್ದರಾಮಯ್ಯ ಯಾರಿಗೂ ಕೊಟ್ಟ ಮಾತಿಗೆ ತಪ್ಪಿಲ್ಲ ಎಂದರು.
ಹಿಂದಿನ ಸರ್ಕಾರದಲ್ಲಿ ಕೂಡ ಮಾತಿನ ಪ್ರಕಾರವೇ ನಡೆದಿದ್ದಾರೆ. ಈಗಿನ ಸರ್ಕಾರದಲ್ಲೂ ಕೂಡ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ ಹಾಗೂ ಮುಂದೆಯೂ ಕೊಟ್ಟ ಮಾತಿನ ಪ್ರಕಾರವೇ ನಡೆದುಕೊಳ್ಳುತ್ತಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಅವರು ಹೇಳಿದರು.
ಶ್ರಮಕ್ಕೆ ಫ್ರತಿಫಲ ಖಂಡಿತವಾಗಿ ಇದೆ. ಅದಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ಒಂದಲ್ಲ ಒಂದು ದಿನ ಡಿಕೆ ಶಿವಕುಮಾರ್ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ ಕಾದು ನೋಡಬೇಕು. ಎಲ್ಲದಕ್ಕೂ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡುತ್ತದೆ ಎಂದರು.
ಡಿಕೆ ಸುರೇಶ್ ಅವರ ಈ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ಸರ್ಕಾರ ರಚನೆ ಸಂದರ್ಭದಲ್ಲಿ 50:50 ಅಡಿ ಅಧಿಕಾರಿ ಹಂಚಿಕೆ ಒಪ್ಪಂದವಾಗಿದ್ದು ನಿಜವೇ? ಎರಡೂವರೆ ವರ್ಷದ ನಂತರ ಸಿಎಂ ಕುರ್ಚಿ ಬಿಟ್ಟು ಕೊಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆಯೇ? ಈ ಎಲ್ಲಾ ಪ್ರಶ್ನೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಉತ್ತರಿಸಬೇಕಿದೆ.


