ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕುಕನೂರು ಪೋಲಿಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ಹೊಟ್ಟೆನೋವಿನಿಂದ ನರಳಾಡಿದ್ದು ತಕ್ಷಣ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಘಟನೆಯಿಂದಾಗಿ ವಸತಿನಿಲಯದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಆತಂಕ ಎದುರಾಗಿದೆ. ಬಾಲಕಿ 9 ತಿಂಗಳ ಗರ್ಭಿಣಿಯಾಗಿದ್ದರೂ ವಾರ್ಡನ್ ಅಥವಾ ಸಿಬ್ಬಂದಿಯ ಗಮನಕ್ಕೆ ಬಾಂದಿಲ್ಲ ಹೇಗೆ ಎಂದು ಪಾಲಕರು ಮತ್ತು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ವಸತಿನಿಲಯದ ಸಿಬ್ಬಂದಿಗೆ ಈ ವಿಷಯ ಗೊತ್ತಿದ್ದೂ ಕಣ್ಮುಚ್ಚಿ ಕುಳಿತಿದ್ದರೇ ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


