ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸೇರಿದಂತೆ ಯಾವುದೇ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ರಹಸ್ಯ ಸಭೆ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕುರಿತು ಹಾಗೂ ಮುಂಬರುವ ಚುನಾವಣೆಗಳ ಕುರಿತು ಚರ್ಚೆ ನಡೆಸಿದ್ದೇವೆ ಹೊರತು ಇತರೆ ಯಾವುದೇ ವಿಷಯ ಚರ್ಚೆ ಆಗಿಲ್ಲ ಎಂದರು.
ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದ್ದು, ಮೊದಲ ದಿನದಿಂದಲೇ ಅವರು ಅದನ್ನು ಎಲ್ಲರಿಗೂ ತಿಳಿಸಿದ್ದರು. ಆದರೆ, ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡಿತು. ಇದೀಗ ನಾಯಕತ್ವ ಬದಲಾವಣೆಯ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸಬೇಕು ಎಂದು ಅವರು ಹೇಳಿದರು.
ಶಾಸಕರು ಇದಕ್ಕೆ ಒಪ್ಪಿಕೊಂಡಿದ್ದಾರೆಯೇ ಎಂದು ಕೇಳಿದಾಗ, ಪಕ್ಷದಲ್ಲಿ ಸದ್ಯ ಅಂತಹ ಯಾವುದೇ ಚರ್ಚೆ ನಡೆಯುತ್ತಿಲ್ಲ. ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅದು ಬಂದ ನಂತರ ನಾವು ಚರ್ಚಿಸುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ಹೇಳಿದರು.
ಗೊಂದಲವನ್ನು ಬಗೆಹರಿಸಯುವ ವಿಷಯದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೀರಾ ಎಂಬ ಪ್ರಶ್ನೆಗೆ, ಅವರ ಭೇಟಿಗೆ ಸಮಯ ಕೇಳುವುದಾಗಿ ಮತ್ತು ಈ ವಿಷಯದ ಬಗ್ಗೆ ಚರ್ಚಿಸಲು ಮತ್ತು ತಮ್ಮ ಅಭಿಪ್ರಾಯವನ್ನು ತಿಳಿಸಲು ಖರ್ಗೆ ಅವರನ್ನು ಭೇಟಿ ಮಾಡುವುದಾಗಿ ಹೇಳಿದರು.
ತಾವೂ ಮುಖ್ಯಮಂತ್ರಿ ಆಕಾಂಕ್ಷಿ ಎನ್ನುವ ಗೃಹ ಸಚಿವ ಜಿ ಪರಮೇಶ್ವರ ಅವರ ಹೇಳಿಕೆ ಸಂಬಂಧಿಸಿದಂತೆ, ‘ಪರಮೇಶ್ವರ ಐದು ವರ್ಷ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಬೆಳಗಾವಿಯಲ್ಲಿ ಹೇಳಿದ್ದೆ. ಈಗಲೂ ಹೇಳುತ್ತೇನೆ. ಪಕ್ಷದಲ್ಲಿ ಅವರು ಕೂಡ ಹಿರಿಯರು ಆದರೆ, ಅಂತಿಮವಾಗಿ ಯಾರು ನಿರ್ಧರಿಸುತ್ತಾರೆ? ಅದು ದೆಹಲಿಯಲ್ಲಿ ನಡೆಯುತ್ತದೆ. ನಾವು ಮಾಡಬಹುದಾದದ್ದು ಹಕ್ಕು ಸಾಧಿಸುವುದಷ್ಟೇ’ ಎಂದು ತಿಳಿಸಿದರು.
ನಿವೃತ್ತಿಯ ನಂತರ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಸೇವೆಗಳ ಬಗ್ಗೆ ಮಾತನಾಡಿದ ಜಾರಕಿಹೊಳಿ, ‘ನಿವೃತ್ತಿಯ ನಂತರವೂ ನಮಗೆ (ಕಾಂಗ್ರೆಸ್) ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವ, ಅವರ ಸೇವೆ ಮತ್ತು ಮಾರ್ಗದರ್ಶನ ಬೇಕಾಗುತ್ತದೆ” ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಇದ್ದು, ತಮ್ಮನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಶಿವಕುಮಾರ್ ಒತ್ತಾಯಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.


