ಅಮೆರಿಕದ ಶ್ವೇತಭವನ ಸಮೀಪ ನಡೆದ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯ ಬಳಿಕ ವಾಷಿಂಗ್ಟನ್‌ನಲ್ಲಿ ಬಿಗಿ ಭದ್ರತೆ ಕೈಗೊಂಡು 500 ಹೆಚ್ಚುವರಿ ರಾಷ್ಟ್ರೀಯ ಗಾರ್ಡ್ ಸಿಬ್ಬಂದಿ ನಿಯೋಜಿಸುವಂತೆ ಟ್ರಂಪ್ ಸೂಚಿಸಿದ್ದಾರೆ.
ಗಾಯಾಳು ಭದ್ರತಾ ಸಿಬ್ಬಂದಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ವಾಷಿಂಗ್ಟನ್ ಮೇಯರ್ ಮುರಿಯಲ್ ಬ್ರೌಸರ್ ತಿಳಿಸಿದ್ದಾರೆ.
ದಿಢೀರ್ ಎಂದು ಕಾಣಿಸಿಕೊಂಡ ಶಂಕಿತ ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾನೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆ ಪ್ರದೇಶದಲ್ಲಿದ್ದ ಇತರ ಸಿಬ್ಬಂದಿ ಗುಂಡು ಹಾರಿಸಿದ ವ್ಯಕ್ತಿಯನ್ನು ಹಿಡಿದಿದ್ದಾರೆಂದು ಪೊಲೀಸ್ ಅಧಿಕಾರಿ ಜೆಫ್ರಿ ಕ್ಯಾರೊಲ್ ತಿಳಿಸಿದ್ದಾರೆ. ದಾಳಿಯ ಉದ್ದೇಶ ಏನು ಎಂಬುದು ತಿಳಿದುಬಂದಿಲ್ಲ.
ಘಟನೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಪ್ರತಿಕ್ರಿಯಿ, ಆ ಪ್ರಾಣಿ ಶೀಘ್ರದಲ್ಲೇ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳು ಶಂಕಿತನನ್ನು ಆಫ್ಘಾನಿಸ್ತಾನ ಪ್ರಜೆ ರಹಮಾನಲ್ಲಾ ಲಕನ್ವಾಲ್ ಎಂದು ಗುರುತಿಸಿದ್ದಾರೆ, ಸೆಪ್ಟೆಂಬರ್ 2021 ರಲ್ಲಿ ಅಮೆರಿಕಕ್ಕೆ ಪ್ರವೇಶಿಸಿದ್ದ ಎನ್ನಲಾಗಿದೆ. ಆತನ ಹಿನ್ನೆಲೆ ಮತ್ತು ಉದ್ದೇಶಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.


