ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕರ್ನಾಟಕದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಘೋಷಿಸಿದ್ದಾರೆ.
ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂದಿಸಿ ಸನ್ಮಾನಿಸಿದರು.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.
ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್.ಸುಧಾಕರ್ ಅವರುಗಳು ಉಪಸ್ಥಿತರಿದ್ದರು.


