ಧರ್ಮಸ್ಥಳದ ಹೆಸರಿಗೆ ಕಳಂಕ ತರಲು ಕೆಲವರು ಹುನ್ನಾರ ನಡೆಸಿದ್ದು, ಎಸ್ ಐಟಿ ತನಿಖೆಯಿಂದ ಸತ್ಯ ಬಯಲಿಗೆ ಬರಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆರೋಪಿಸಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವ ಹಾಗೂ ಯುವತಿಯರ ಹತ್ಯೆ ಪ್ರಕರಣದ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದರು.
ಎಸ್ ಐಟಿ ತನಿಖೆಯನ್ನು ಸ್ವಾಗತಿಸುತ್ತೇವೆ. ಒಂದು ವೇಳೆ ಸಿಬಿಐ ತನಿಖೆ ನಡೆಸಿದರೂ ಸಂಪೂರ್ಣ ಸಹಕಾರ ನೀಡುತ್ತೇವೆ. ಎಸ್ ಐಟಿ ತನಿಖೆಯಲ್ಲಿ ಸತ್ಯ ಹೊರಗೆ ಬರಲಿದೆ ಎಂದರು.
ಧರ್ಮಸ್ಥಳದ ಉತ್ತಮ ಕೆಲಸಗಳನ್ನು ಸಹಿಸದ ಕೆಲವು ವ್ಯಕ್ತಿಗಳು ಧರ್ಮಸ್ಥಳಕ್ಕೆ ಕಳಂಕ ತರಲು ಪ್ರಯತ್ನಿಸುತ್ತಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಕೆಲಸ ನಡೆಯುತ್ತಿದೆ ಎಂದು ಅವರು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಕೆಲವು ಯುವಕರು ಮಾತ್ರ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ. ಯುವಕರನ್ನು ಸೆಳೆಯುವ ಮೂಲಕ ಧರ್ಮಸ್ಥಳಕ್ಕೆ ಯುವಕರು ಹೋಗಬಾರದು ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.