Menu

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ

mandya krishi mela

ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.

ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ. ನಾನು ರಾಜಕೀಯಕ್ಕೆ ಬರುವ ಮೊದಲು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ.   ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ತನೆ ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಯಕ್ಕೆ ಮಾನವ ಸಂಪನ್ಮೂಲ ಕಡಿಮೆ ಇದೆ ರೈತರು ಆಧುನಿಕ ಯಂತ್ರೋಪಕರಣಗಳನ್ನು ಬೆಳೆಸಿ ಕೃಷಿ ಮಾಡಬೇಕು ಇದರಿಂದ ಸಮಯ ಮತ್ತು ಹಣ ಎರಡು ಉಳಿತಾಯವಾಗುತ್ತದೆ. ಸರ್ಕಾರ ಕೃಷಿ ಯಂತ್ರೋಪಕರಣಗಳು ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.

ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಬೇಡಿಕೆ

ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ ಸದರಿಯ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ. ಎಂದರು.

ಎಲ್ಲ ಜಾತಿ ಧರ್ಮಗಳಲ್ಲೂ ಬಡವರು ಹಾಗೂ ಕೃಷಿಕರು ಇದ್ದಾರೆ ಎಲ್ಲರಲ್ಲೂ ಸಮಾನತೆ ಬರಬೇಕು. ಡಾ. ಬಿ.ಆರ್ ಅಂಬೇಡ್ಕರ್ ಅವರು ಹೇಳಿದಂತೆ ಎಲ್ಲಾ ಸಮಾಜದಲ್ಲೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಮಾನತೆ ಬಂದಾಗ ಮಾತ್ರ ಅಸಮಾನತೆಯನ್ನು ಓಡಿಸಬಹುದು. ಸಮಾಜದಲ್ಲಿ ಅನ್ಯಾಯ ಕೊಳಗಾದ ಶೋಷಿತ ಸಮುದಾಯಗಳ ಮಹಿಳೆಯರ, ದೀನ ದುರ್ಬಲರನ್ನು ಸರಿದೂಗಿಸಲು ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ. ರಾಜ್ಯದ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆ, ಮೈ ಶುಗರ್ ಅನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ 50 ಕೋಟಿ ಹಣವನ್ನು ನೀಡಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಿದೆ. ಮೈ ಶುಗರ್ ಕಾರ್ ಕಾರ್ಖಾನೆ ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು ಎಂದರು.

ನಮ್ಮ ಸರ್ಕಾರ ರಾಜ್ಯದ ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಮಂಡ್ಯ ಜಿಲ್ಲೆಯ 18 ಕೋಟಿ ಜನ ಮಹಿಳೆಯರು ಶಕ್ತಿ ಯೋಜನೆ ಅಡಿ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ನ್ನು ಉಚಿತವಾಗಿ ನೀಡಲಾಗುತ್ತಿದೆ. ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ  ಕಬ್ಬಿನ ಗುಣಮಟ್ಟ ಹೆಚ್ಚಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ ಗಂಗಾಧರ,  ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಎಂ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *