ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ಕ್ಲಬ್ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನಗೊಂಡಿದ್ದಾರೆ. ಘಟನೆಯಲ್ಲಿ 50 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯರಾತ್ರಿ 12 ಗಂಟೆಗೆ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ, ಕ್ಲಬ್ನ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಮೃತಪಟ್ಟವರಲ್ಲಿ 4 ಜನರು ಪ್ರವಾಸಿಗರು, 14 ಜನರು ಸಿಬ್ಬಂದಿಯಾಗಿದ್ದು, 7 ಜನರ ಗುರುತು ಇನ್ನೂ ಪತ್ತೆಯಾಗಿಲ್ಲ.
ಪೊಲೀಸ್ ಮತ್ತು ಅಗ್ನಿಶಾಮಕ ದಳದ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್ಕ್ಲಬ್ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರೋದೇ ಹೆಚ್ಚಿನ ಅವಘಡಕ್ಕೆ ಕಾರಣವಾಗಿದೆ.
ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ, ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಜೊತೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಅಗ್ನಿ ದುರಂತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದು ಹೇಳಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನೈಟ್‌ಕ್ಲಬ್ ಅಗ್ನಿ ದುರಂತದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದು ಶೀಘ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.


