Thursday, December 11, 2025
Menu

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ.

ಬೆಳಗಾವಿ ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ ಎಂದು ತಿಳಿಸಿದರು.

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಪರಿಷತ್ ನಲ್ಲಿ ತಿಳಿಸಿದ ಸಚಿವ ಮುನಿಯಪ್ಪ ಅವರು ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್‌ಗಳನ್ನು  ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *