ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಸಮುದಾಯ ಆರೋಗ್ಯ ಕೇಂದ್ರಗಳು (ಸಿಎಚ್‌ಸಿ), ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಮತ್ತು ತಾಲೂಕು ಆಸ್ಪತ್ರೆಗಳಲ್ಲಿನ ಕೊರತೆಯನ್ನು ನೀಗಿಸಲು ಸರ್ಕಾರ ತ್ವರಿತ ನೇಮಕ ಪ್ರಕ್ರಿಯೆ ಆರಂಭಿಸಲಿದೆ ಎಂದು ಹೇಳಿದ್ದಾರೆ.
337 ತಜ್ಞ ವೈದ್ಯರು ಮತ್ತು 250 ಸಾಮಾನ್ಯ ಕರ್ತವ್ಯ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮೋದನೆ ನೀಡಲಾಗಿದೆ. ಸರ್ಕಾರಿ ಕೋಟಾದ ವೈದ್ಯಕೀಯ ಪದವೀಧರರಿಗೆ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವಾ ಯೋಜನೆ ಯಡಿ 1,500 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಹಣಕಾಸು ಇಲಾಖೆಯು ನೇರ ನೇಮಕದ ಮೂಲಕ ಇನ್ನೂ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳ ನೇಮಕಕ್ಕೆ ಅನುಮೋದನೆ ನೀಡಿದೆ. ಈಗಾಗಲೇ ಎಲ್ಲ ರೀತಿಯ ಅಗತ್ಯ ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇಲಾಖೆಯು 600 ಸ್ಟಾಫ್ ನರ್ಸ್ ಹುದ್ದೆಗಳು, 400 ಜೂನಿಯರ್ ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗಳು ಮತ್ತು 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದೆ. ವೃತ್ತ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಡಾ. ಹಿಮಾಂಶು ಭೂಷಣ್ ನೇತೃತ್ವದ ತಜ್ಞರ ಸಮಿತಿಯು ಐಪಿಎಚ್‌ಎಸ್ ಮಾನದಂಡಗಳು ಮತ್ತು ರಾಷ್ಟ್ರೀಯ ಆರೋಗ್ಯ ನೀತಿ ಮಾರ್ಗಸೂಚಿಗಳ ಆಧಾರದ ಮೇಲೆ ಹೊಸ ಪಿಎಚ್‌ಸಿಗಳು ಮತ್ತು ಸಿಎಚ್‌ಸಿಗಳನ್ನು ಸ್ಥಾಪಿಸಬೇಕಾದ ಸ್ಥಳಗಳನ್ನು ವೈಜ್ಞಾನಿಕವಾಗಿ ಗುರುತಿಸುವ ಕೆಲಸ ಮಾಡಲಿದೆ ಎಂದರು.


