ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ನಗರದ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿರುವುದರಿಂದ ಪ್ರಕರಣದಲ್ಲಿ ಜೈಲು ಸೇರಿದ ನಾಲ್ಕು ತಿಂಗಳ ಬಳಿಕ ಶಾಸಕರು ನಿರಾಳರಾಗಿದ್ದಾರೆ.
ಕಳೆದ ಆಗಸ್ಟ್ 23ರಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿದ್ದರು. ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ಮೂಲಕ ಸುಮಾರು 2,000 ಕೋಟಿ ರೂಪಾಯಿಗೂ ಅಧಿಕ ಹಣದ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಆರೋಪ ಇವರ ಮೇಲಿತ್ತು.
ಪ್ರಕರಣದಲ್ಲಿ ಶಾಸಕನಿಗೆ ಸಂಬಂಧಿಸಿದ 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. ಸುಮಾರು 30 ಕಡೆ ನಡೆದ ದಾಳಿಯಲ್ಲಿ ನಗದು, ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.
ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.


