ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿಗಳು. ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸಾಗುವಾಗ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.


