ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ ಹಾಗೂ ಟ್ರಸ್ಟಿಗಳ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಅಂಗಡಿ ಮತ್ತು ಅದರ ಮಾಲೀಕ ಗೋವರ್ಧನ್ ನಿವಾಸದ ಮೇಲೆ ಒಂಬತ್ತು ಅಧಿಖಾರಿಗಳ ತಂಡದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. ಚಿನ್ನ ಕಳವು ಪ್ರಕರಣದಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಪಾತ್ರ ಪ್ರಮುಖವಾಗಿದೆ.
ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದೇವಸ್ಥಾನದಿಂದ ಕಳವು ಮಾಡಿದ್ದ ಚಿನ್ನವನ್ನು ಗೋವರ್ಧನ್ಗೆ ಮಾರಾಟ ಮಾಡಿದ್ದ ಎಂಬ ಆರೋಪವಿದೆ. ಅಕ್ರಮವಾಗಿ 470 ಗ್ರಾಂ ಚಿನ್ನವನ್ನು ಖರೀದಿಸಿದ ಆರೋಪದ ಮೇಲೆ ಕೇರಳ ಎಸ್ಐಟಿ ಅಧಿಕಾರಿಗಳು ಗೋವರ್ಧನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಪ್ರಕರಣದಲ್ಲಿ ದೊಡ್ಡ ಮಟ್ಟದ ಹಣ ಅಕ್ರಮ ವರ್ಗಾವಣೆ ನಡೆದಿರುವ ಶಂಕೆ ಕಾರಣ ಇಡಿ ಈಗ ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆ ಆರಂಭಿಸಿದೆ. 2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭ 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಬಗ್ಗೆ ಕೇರಳ ಹೈಕೋರ್ಟ್ ತನಿಖೆಗೆ ಆದೇಶಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಬರಿಮಲೆಯ ಮಾಜಿ ಮುಖ್ಯ ಅರ್ಚಕ (ತಂತ್ರಿ) ಕಂದರಾರು ರಾಜೀವ್, ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷರು ಸೇರಿದಂತೆ 12ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.


