ಬೈಕ್ ಟ್ಯಾಕ್ಸಿ ನಿಷೇಧಿಸಿ ಸರ್ಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಕಾನೂನಿನಡಿ ಸರ್ಕಾರ ಅನುಮತಿ ನೀಡಬೇಕು ಎಂದು ಹೇಳಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.
ಒಲಾ, ಊಬರ್ ಮತ್ತಿತರ ಅಗ್ರಿಗೇಟರ್‌ಗಳು ಸಲ್ಲಿಸಿದ ಮೇಲ್ಮನವಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಪರಿಗಣಿಸಿದೆ. ಬೈಕ್ ಮಾಲಕರು ಅಥವಾ ಅಗ್ರಿಗೇಟರ್‌ಗಳು ಸಾರಿಗೆ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಅರ್ಹ ಮನವಿಗಳನ್ನು ಸರ್ಕಾರ ಪುರಸ್ಕರಿಸಿ ಅನುಮತಿ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ. ಇದರಿಂದ ಬೆಂಗಳೂರಿನ ಪ್ರಯಾಣಿಕರು ಬೈಕ್ ಟ್ಯಾಕ್ಸಿ ಪ್ರಯಾಣ ಮಾಡಬಹುದಾಗಿದೆ.
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಹಾವಳಿ ಹೆಚ್ಚಾಗಿದೆ ಎಂದು ಕೆಲವು ಸಂಸ್ಥೆಗಳು ದೂರು ನೀಡಿದ್ದವು, ಆಟೋ, ಕ್ಯಾಬ್ ಸೇವೆಗಳು ದುಬಾರಿಯಾಗುತ್ತಿದ್ದಂತೆ ಬೈಕ್ ಟ್ಯಾಕ್ಸಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳ ಪ್ರಯಾಣಿರಿಗೆ ಅನುಕೂಲ ಕರವಾಗಿತ್ತು. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿ ಆದೇಶ ನೀಡಿತ್ತು. ಆದೇಶ ಪ್ರಶ್ನಿಸಿ ಬೈಕ್ ಟ್ಯಾಕ್ಸಿ ಅಗ್ರೇಟರ್ ಕಂಪನಿಗಳು ಕೋರ್ಟ್‌ಗೆ ಹೋಗಿದ್ದವು.
ವಿಚಾರಣೆ ನಡೆಸಿದ ಏಕಸದಸ್ಯ ಪೀಠ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದಿತ್ತು. ಹೀಗಾಗಿ ಅಗ್ರಿಗೇಟರ್ ಕಂಪನಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿವೆ. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಏಕಸದಸ್ಯ ಪೀಠ ನೀಡಿದ್ದ ಆದೇಶ ರದ್ದುಗೊಳಿಸಿ ಬೈಕ್ ಟ್ಯಾಕ್ಸಿಗೆ ಕರ್ನಾಟಕದಲ್ಲಿ ಅನುಮತಿ ನೀಡಿದೆ.
ಹಲವರು ಅಗ್ರೇಟರ್ ಕಂಪನಿಗಳ ಜೊತೆ ಆನ್‌ಲೈನ್ ನೋಂದಣಿ ಮಾಡಿಕೊಂಡು ಖಾಸಗಿ ನಂಬರ್ ಪ್ಲೇಟ್ ಬೈಕ್‌ನಲ್ಲೂ ಸೇವೆ ನೀಡುತ್ತಿದ್ದರು. ಯಾವುದೇ ಅನುಮತಿ ಇಲ್ಲದೆ ಬೈಕ್ ಟ್ಯಾಕ್ಸಿ ಸೇವೆಗಳಿಗೆ ವಿರೋಧ ವ್ಯಕ್ತವಾಗಿತ್ತು. ಟ್ಯಾಕ್ಸಿ ಅಡಿಯಲ್ಲಿ ಬೈಕ್ ಟ್ಯಾಕ್ಸಿ ಸೇವೆ ಬರುವುದಿಲ್ಲ ಎಂದು ಸರ್ಕಾರ ನಿಷೇಧಿಸಿತ್ತು.


