ಕೆಎಸ್‌ಆರ್‌ಟಿಸಿ ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಜ.29)ರಂದು ಪ್ರತಿಭಟನೆ ನಡೆಸಲಿದ್ದು, ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.
ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೋಗೆ ಕರೆ ನೀಡಿದೆ. ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಾರಿಗೆ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡು ಬೆಳ್ಳಿಗ್ಗೆ 10 ಗಂಟೆಯಿಂದ 4ಗಂಟೆವರೆಗೂ ಪ್ರತಿಭಟನೆ ನಡೆಸಲಿದ್ದಾರೆ.
2020ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ನೀಡಬೇಕು. 2024ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಲಾಗುತ್ತಿದೆ. ನಾಳೆ ಸಂಜೆವರೆಗೂ ಸರ್ಕಾರದಿಂದ ಪ್ರತಿಕ್ರಿಯೆ ಬದಿದ್ದರೆ ಜನವರಿ 30ರಿಂದ ಸಾರಿಗೆ ನೌಕರರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಜಂಟಿ ಕ್ರಿಯಾ ಸಮಿತಿ ಹೇಳಿದೆ.
ಕೆಎಸ್‌ಆರ್‌ಟಿಸಿ ನೌಕರರ ಕೂಟವೂ ಸಹ ಪ್ರತಿಭಟನೆಗೆ ಮುಂದಾಗಿದ್ದು, ಶಿವರಾತ್ರಿ ನಂತರ ಫೆಬ್ರವರಿ 15 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಸಾರಿಗೆ ಇಲಾಖೆ ಪ್ರತಿಭಟನಾ ನಿರತ ಸಾರಿಗೆ ನೌಕರರಿಗೆ ಎಚ್ಚರಿಕೆ ನೀಡಿದ್ದು, ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ. ಗುರುವಾರ ಕರ್ತವ್ಯಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಆದೇಶ ಹೊರಡಿಸಿದೆ.


