Thursday, February 05, 2026
Menu

ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು ಅಮಾನತು

ಕೆಲವು ದಿನಗಳ ಹಿಂದೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದು, ರಂಪಾಟ ನಡೆಸಿದ ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಅಮಾನತು ಆದೇಶ ನೀಡಿದ್ದು, ಇಲಾಖಾ ತನಿಖೆಗೂ ಸೂಚನೆ ನೀಡಿ ದ್ದಾರೆ.

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಗೋವಿಂದರಾಜು ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪ್ರಕರಣದಿಂದ ಮುಕ್ತಿಗೊಳಿಸುವುದಾಗಿ ಹಾಗೂ ಕಾನೂನು ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿತ್ತು. ವ್ಯಕ್ತಿಯೊಬ್ಬರು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು, ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚದ ಹಣ ಗೋವಿಂದರಾಜು ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಗೋವಿಂದರಾಜು ಲಂಚ ಸ್ವೀಕರಿಸಿದ್ದಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗಿತ್ತು. ಅಮಾನತು ಅವಧಿಯಲ್ಲಿ ಅವರ ವಿರುದ್ಧ ಇಲಾಖಾ ತನಿಖೆ ನಡೆಯಲಿದ್ದು, ತನಿಖೆಯ ವರದಿ ಆಧರಿಸಿ ಮುಂದಿನ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Related Posts

Leave a Reply

Your email address will not be published. Required fields are marked *