Wednesday, February 11, 2026
Menu

ಹಿರಿಯ ಪತ್ರಕರ್ತ,ಮಾಜಿ ಎಂಎಲ್‌ಸಿ ಪಿ.ರಾಮಯ್ಯ ಇನ್ನಿಲ್ಲ

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 ) ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಅವರು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ  ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಡಾ. ಬಾಲಜಿ  ಮಾಹಿತಿ ನೀಡಿದ್ದಾರೆ.

ಅವರಿಗೆ  ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗೂ ಸೊಸೆಯಂದಿರು, ಮೊಮ್ಮಕಳು ಇದ್ದಾರೆ.  1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ “ದಿ ಹಿಂದೂ ” ಪತ್ರಿಕೆಯಲ್ಲಿ ಐದು ದಶಕ ಪತ್ರಕರ್ತರಾಗಿ  ಕೆಲಸ ಮಾಡಿದ್ದು,   ವಿಧಾನ ಪರಿಷತ್ತಿನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಯುಡಬ್ಲ್ಯೂಜೆ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ  ಪತ್ರಿಕಾ ಅಕಾಡೆಮಿ ಹಾಗೂ ಹಲವು  ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು.  ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಪಾರ್ಥಿವ ಶರೀರವನ್ನು  ಬುಧವಾರ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1 7 ನೇ ಮೇನ್ 16 ನೇ ಕ್ರಾಸ್ ಇಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು  ಕುಟುಂಬದವರು  ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ರಾಮಯ್ಯ ಅವರ ನೀಧನಕ್ಕೆ ಸಂತಾಪ ಸಲ್ಲಿಸಿದ್ದು,  ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

 

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ. ‘ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು. ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ವಿದ್ಯಮಾನಗಳ ಜ್ಞಾನ-ಅನುಭವ ಬೆರಗುಗೊಳಿಸುತಿತ್ತು. ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲು ಶ್ರಮಿಸಿದ್ದರು. ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದ ಸದಸ್ಯರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪತ್ರಿಕೋದ್ಯಮದ ತಪಸ್ವಿ ಎಂದೇ ಖ್ಯಾತರಾಗಿದ್ದ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಯಿತು. ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಮೌಲ್ಯಯುತ ಸೇವೆ ಸಲ್ಲಿಸಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದ ಅವರ ಅಗಲಿಕೆ ಮಾಧ್ಯಮ ಕ್ಷೇತ್ರ ಹಾಗೂ ಸಮಾಜಕ್ಕೆ ದೊಡ್ಡ ನಷ್ಟ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *