ಸರ್ಕಾರದಿಂದ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಲ್ಯಾಪ್ಸ್ ಆಗದಂತೆ ಬಳಸಬೇಕು. ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ಯಾವುದೇ ರೀತಿ ಅನನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ೨೦೨೫-೨೬ ನೇ ಸಾಲಿನ ಡಿಸೆಂಬರ್ ೨೦೨೫ ರ ಅಂತ್ಯಕ್ಕೆ ಕೊನೆಗೊಂಡಂತೆ ಮೂರನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಪ್ರತಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿನ ನೀರಿನ ಘಟಕಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ಒಂದು ವೇಳೆ ಯಾವುದೇ ರೀತಿಯ ಲೋಪದೋಷಗಳು ಅಥವಾ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದರು.
ಕೃಷಿ ವಿಶ್ವವಿದ್ಯಾಲಯದವರು ಕಾಲಕ್ಕೆ ತಕ್ಕಂತೆ ಹೊಸ ಹೊಸ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಅವುಗಳ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಮತ್ತು ಪ್ರಸ್ತುತ ಮಾವಿನ ಗಿಡಗಳು ಹೂವು ಹಿಡಿದಿವೆ. ಅವುಗಳಿಗೆ ಜಿಗಿ ಆಗಿ ಮಾವಿನ ಕಾಯಿ ಹೂವುಗಳು ಉದುರುತ್ತಿವೆ. ಅವುಗಳ ಬಗ್ಗೆ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆಯವರು ರೈತರಿಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ ಅವರು ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿರುವ ಯೋಜನೆಗಳನ್ನು ಪಾರದರ್ಶಕವಾಗಿ ಮತ್ತು ನಿಯಮಾನುಸಾರ ಅನುಷ್ಠಾನಗೊಳಿಸಬೇಕು. ಮೀಸಲಾತಿಗೆ ಅನುಗುಣವಾಗಿ ಅನುದಾನವನ್ನು ಬಳಕೆ ಮಾಡಬೇಕು. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು. ಶಾಸಕರಾದ ಎನ್.ಎಚ್.ಕೋನರಡ್ಡಿ, ಎಂ. ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಮಾತನಾಡಿದರು.
ಸಭೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ, ರಾಷ್ಟ್ರೀಯ ಹೆದ್ದಾರಿ, ಪಂಚಾಯತ ರಾಜ್ ಇಂಜನೀಯರಿಂಗ್, ಲೋಕೊಪಯೋಗಿ, ಸಹಕಾರಿ, ಸಾರಿಗೆ, ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ ಮಾರಾಟ ಮಂಡಳಿ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡಿದರು.


