Thursday, February 26, 2026
Menu

ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸಚಿವ ಸ್ಥಾನವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ ಹೈಕಮಾಂಡ್‌ನ ನಿರ್ಣಯವಾಗಿದ್ದು, ಅದನ್ನು ಪಾಲಿಸಲಾಗುವುದು ಎಂದಿದ್ದಾರೆ.

ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್ ಶಾಸಕರಲ್ಲಿ 31 ಮಂದಿ ಹೈಕಮಾಂಡ್‌ಗೆ ಪತ್ರ ಬರೆದು, ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಕನಿಷ್ಠ ಐದು ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಇದು 2028ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ಸಹಾಯಕವಾಗುತ್ತದೆ ಎಂದು ಅವರು ವಾದಿಸಿದ್ದರು.

ಇದಾದ ಬಳಿಕ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ 24 ಮಂದಿ ವಿಧಾನ ಪರಿಷತ್‌ ಸದಸ್ಯರು ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಪರಿಷತ್‌ ಸದಸ್ಯರು ಸಹಿ ಮಾಡಿದ ಪತ್ರವನ್ನು ಸಲ್ಲಿಸಿದ್ದಾರೆ.

ಶಾಸಕರು ತಮ್ಮ ಆಸೆಗಳನ್ನು ವ್ಯಕ್ತಪಡಿಸುವುದು ಸಹಜ ಮತ್ತು ತಪ್ಪಲ್ಲ. ಎಲ್ಲರಿಗೂ ಸಚಿವರಾಗಬೇಕು ಎಂಬ ಆಕಾಂಕ್ಷೆ ಇರುತ್ತದೆ. ಆದರೆ ಮೊದಲ ಬಾರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ನಿರ್ಣಯ ಪಕ್ಷದಲ್ಲಿ ತೆಗೆದುಕೊಳ್ಳಲಾಗಿದೆ. ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಆಪ್ತ ಬಣದ ಕೆಲವು ಶಾಸಕರು ಒಂದು ವಾರದ ಡೆಡ್‌ಲೈನ್ ನೀಡಿ ಹೈಕಮಾಂಡ್ ಭೇಟಿಗೆ ಸಜ್ಜಾಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಿರಾಕರಿಸಿದರು. ನಾನಿಲ್ಲಿ ರಾಜಕೀಯ ಮಾತನಾಡುವುದಿಲ್ಲ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದರು.

Related Posts

Leave a Reply

Your email address will not be published. Required fields are marked *