ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಒಟ್ಟು ನಾಲ್ವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ.


