ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 15ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ರಾಜಕೀಯ ವೈಷಮ್ಯದಿಂದ ಧಾರವಾಡದಲ್ಲಿ 2016ರ ಜೂ.16ರಂದು ಯೋಗೇಶ್ ಗೌಡ ಹತ್ಯೆ ಮಾಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಈ ಕೃತ್ಯಕ್ಕೆ ಒಳಸಂಚು ಮಾಡಿದ ಆರೋಪವಿದೆ. 2019ರಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಸಿಬಿಐ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.
2021ರಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಳೆದ ವರ್ಷ ಜೂನ್‌ನಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿತ್ತು. ಕಳೆದ 6 ತಿಂಗಳಿನಿಂದ ಜೈಲ್ಲಿನಲ್ಲಿದ್ದರು. ಬಳಿಕ ಫೆ.27ರಂದು ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.
ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ ಎಂಬ ನಂಬಿಕೆಯಿದೆ. ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ. ಕೋರ್ಟ್ ತೀರ್ಪು ಪ್ರಕಟಿಸಲಿ ಎಂದು ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹೇಳಿದ್ದರು.


