ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಸಹಾಯಧನವನ್ನು ಖಾಸಗಿ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಅವರಿಗೆ ಬರೆದಿದ್ದ ಪತ್ರದಲ್ಲಿ, ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಶಕ್ತಿಯಾಗಿದೆ. ಇತ್ತೀಚೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾದ ಕೂಡಲೇ ಕೆಲವು ಖಾಸಗಿ ಫೈನಾನ್ಸ್ ಸಂಸ್ಥೆಗಳು, ಸ್ತ್ರೀಶಕ್ತಿ ಸಂಘಗಳು ಆ ಹಣವನ್ನು ಸಾಲದ ಬಾಕಿ ಅಥವಾ ಬಡ್ಡಿ ಎಂದು ಹೇಳಿ ಬಲವಂತಾಗಿ ಕಡಿತಗೊಳಿಸುತ್ತಿವೆ. ಕೆಲವು ಕಡೆ ಬ್ಯಾಂಕ್ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅಥವಾ ಫಲಾನುಭವಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿದ್ದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮತ್ತು ಶಾಸಕ ದಿನೇಶ್ ಗೂಳಿಗೌಡ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದನ್ನು ಪರಿಗಣಿಸಿ ಮುಖ್ಯಮಂತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಸೂಚನೆ ನೀಡಿದ್ದಾರೆ.
ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಮುಖ್ಯ ಕಾರ್ಯದರ್ಶಿ, ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ನಿರ್ದೇಶಿಸಿದ್ದಾರೆ.


