Menu

ಸತ್ತವರ ಹೆಸರಲ್ಲಿ ಸರ್ಕಾರದ 4.27 ಕೋಟಿ ರೂಪಾಯಿ ಅಕ್ರಮ: ಮಧುಗಿರಿ ತಾ.ಪಂ ಕ್ಲರ್ಕ್‌, ಕಾಂಗ್ರೆಸ್‌ ಮುಖಂಡನ ವಿರುದ್ಧ ಎಫ್‌ಐಆರ್‌

ನಿವೃತ್ತರಾಗಿರುವ ಮತ್ತು ಮೃತಪಟ್ಟಿರುವ ಸರ್ಕಾರಿ ನೌಕರರ ಹೆಸರಿನಲ್ಲಿ ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ್ದಾರೆ.  4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಇದೆ. ಸೌಮ್ಯಾ ,  ಕಾಂಗ್ರೆಸ್ ಜಿಲ್ಲಾ ಮುಖಂಡ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಣಕಾಸು ಅಕ್ರಮ ಪ್ರಕರಣದ ಆರೋಪಿ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ.

ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬೆಂಗಳೂರಿನ ಕೇಂದ್ರ ಕಚೇರಿಯಿಂದ ನಡೆದ ಆಡಿಟ್ ವೇಳೆ ದಾಖಲೆಗಳಲ್ಲಿ ವ್ಯತ್ಯಾಸ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಅವರಿಗೆ ತಲುಪಿದ ನಂತರ ಸಮಗ್ರ ಪರಿಶೀಲನೆ ಕೈಗೊಳ್ಳಲಾಗಿದೆ.

4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಇದೆ, ದರ್ಜೆ ಸಹಾಯಕಿ, ಕಾಂಗ್ರೆಸ್ ಜಿಲ್ಲಾ ಮುಖಂಡ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸರ್ಕಾರಿ ನೌಕರರು ಸ್ವಯಂ ನಿವೃತ್ತಿ ಪಡೆದಾಗ ಅಥವಾ ಸೇವೆಯಲ್ಲಿದ್ದಾಗ ಮರಣ ಹೊಂದಿದ ಸಂದರ್ಭ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ.

ಅರ್ಹ ಫಲಾನುಭವಿಗಳಿಗೆ ಹೋಗಬೇಕಿದ್ದ ಹಣವನ್ನು ಸೌಮ್ಯ ತಮಗೆ ಬೇಕಾದವರ ಮತ್ತು ಸಂಬಂಧಿಕರ ವಿವಿಧ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರಮೇಶ್, ಶಿವಲೀಲಾ, ಸುಮಾ, ಮೀನಾಕ್ಷಿ ಹಾಗೂ ಕಚೇರಿ ಸಿಬ್ಬಂದಿ ಪ್ರವೀಣ್ ವಿರುದ್ಧ ಪ್ರಕರಣ ದಾಖಲಾಗಿದೆ. ತಾಲ್ಲೂಕು ಪಂಚಾಯ್ತಿಯ ಇಒ ಲಕ್ಷ್ಮಣ ಬಿ.ಎಸ್. ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರು ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ತನಿಖೆಯಲ್ಲಿ ನೌಕರರ ರೆಸಿಪಿಯಂಟ್ ಐಡಿ ಮತ್ತು ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆದಾರರ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದಿದೆ. ಒಟ್ಟು 21 ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, 18 ನಿವೃತ್ತ ಹಾಗೂ 3 ಮರಣ ಹೊಂದಿದ ನೌಕರರ ಹೆಸರನ್ನು ಬಳಸಿಕೊಂಡು ಅಕ್ರಮ ನಡೆಸಿರುವುದು ತನಿಖೆಯಲ್ಲಿ ಬಯಲಾಗಿದೆ.

ಕಳೆದ ಐದು ವರ್ಷಗಳಲ್ಲಿ 29 ಬ್ಯಾಂಕ್ ಖಾತೆಗಳ ಮೂಲಕ 118 ವ್ಯವಹಾರಗಳಲ್ಲಿ ಸುಮಾರು 4.24 ಕೋಟಿ ರೂಪಾಯಿಗಳನ್ನು ಸೌಮ್ಯ ಮತ್ತು ಆಕೆಯ ಕುಟುಂಬದ ಐದು ಸದಸ್ಯರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಣವನ್ನು ಹಂತ ಹಂತವಾಗಿ ವರ್ಗಾಯಿಸಿ ಅಂತಿಮವಾಗಿ ಕುಟುಂಬದ ಖಾತೆಗಳಿಗೆ ಸೇರಿಸಲಾಗಿದೆ. ಪ್ರಕರಣದಲ್ಲಿ ಬೇರೆ ಅಧಿಕಾರಿಗಳ ಪಾತ್ರದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *