ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಂಚರಿಸುತ್ತಿದ್ದ ಕಾರು ನಡುವೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಏಳು ಮಂದಿ ಜೀವಂತ ಭಸ್ಮವಾಗಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲಿಸಿ, ಕಾರ್ಯಾಚರಣೆ ನಡೆಸಿದ್ದಾರೆ.
ಮೃತಪಟ್ಟವರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಮೃತಪಟ್ಟವರು. ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷ) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.
ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡುಕುಟುಂಬ ಸಿರವಾರಕ್ಕೆ ವಾಪಸಗುತ್ತಿದ್ದಾಗ ಈ ದುರಂತ ನಡೆದಿದೆ. ಬಸ್‌ಗೆ ಬೆಂಕಿ ತಗುಲಿದರೂ 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಬೆಂಕಿಯಲ್ಲಿ ಕರಕಲಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆ ಕಾರ್ಯ ಆರಂಭಿಸಿದ್ದಾರೆ.


